Ramangare : ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ (Bengaluru-Mysuru Expressway) ಚನ್ನಪಟ್ಟಣ (Channapatna) ಬೈಪಾಸ್ ನಲ್ಲಿ ನಡೆದಿದೆ.
ಬೆಂಗಳೂರಿನ (Bengaluru) ಕೆಂಗೇರಿ ಹತ್ತಿರದ ಚೈತನ್ಯ ನಗರ ನಿವಾಸಿಗಳಾದ ರವಿ ಪೂಜಾರ್ (46), ಇಂಚರ ಪೂಜಾರ್ (15), ಸಿರಿ ಪೂಜಾರ್ (3) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಲಕ್ಷ್ಮಿ ಪೂಜಾರ್ (40) ಶಾಂತಲಾ ಪೂಜಾರ್ (8) ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ.
ಮೃತರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದ್ದು, ಬೆಂಗಳೂರಿನ ನಿವಾಸಿಗಳಾದ ಇವರು ಹುಣಸೂರಿನಲ್ಲಿ ಸ್ನೇಹಿತರ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ ಸಮೀಪದ ಬೈಪಾಸ್ ರಸ್ತೆಯಲ್ಲಿ ಇವರು ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಡಿವೈಡರ್ ದಾಟಿ ರಸ್ತೆಯ ಮತ್ತೊಂದು ಬದಿಗೆ ಜಿಗಿದಿದೆ. ಈ ಸಂದರ್ಭದಲ್ಲಿ ಮೈಸೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನೆಗೆ ಸಂಬಂಧಿಸಿದಂತೆ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.