ಕರ್ನಾಟಕದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಈ ಮೂಲಕ ಸೂಚನೆ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. 26 ಜಿಲ್ಲೆಗಳಲ್ಲಿ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ ಪರಿಶೀಲನೆ ಕಾರ್ಯಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಹೇಳಲಾಗಿದೆ.

ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮೂಲ ದಾಖಲೆ ಪರಿಶೀಲನೆ ನಡೆಯಲಿದೆ. 1:1 ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗಿರುವ ಎಲ್ಲಾ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಸಹ ಪರಿಶೀಲನೆ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲು ತಿಳಿಸಲಾಗಿದೆ.

ಅಭ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (Health and Fitness certificate), ಪೊಲೀಸ್ ಪರಿಶೀಲನಾ ಪ್ರಮಾಣಪತ್ರ (Police verification certificate), ಸಿಂಧುತ್ವ ಪ್ರಮಾಣ ಪತ್ರ, ಗ್ರಾಮೀಣ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಪ್ರಮಾಣ ಪತ್ರ, ಮಾಜಿ ಸೈನಿಕರ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ, 9. ಸಂಬಂಧಿಸಿದ ಎಲ್ಲಾ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು, ಸೇವಾನಿರತ ಶಿಕ್ಷಕರು ಸಲ್ಲಿಸಿರುವ ನಿರಾಪೇಕ್ಷಣ ಪ್ರಮಾಣ ಪತ್ರಗಳನ್ನು ಸಿದ್ಧ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ.