Bangalore : ರಾಜ್ಯದಲ್ಲಿ ಗುರುವಾರದಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೀಗಾಗಿ ಹಲವು ಪ್ರದೇಶಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಏ. 27ರಿಂದ ಮೇ 1ರ ವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಏ.27, ಏ. 28 ಮತ್ತು ಮೇ 1 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೂಡ ಏ.27 ಮತ್ತು ಏ.28ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಏ.29 ರಿಂದ ಮೇ 1ರವರೆಗೆ ವ್ಯಾಪಕ ಮಳೆಯಾಗಲಿದ್ದು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಕಂಬಗಳು ಧರೆಗೆ ಬಿದ್ದಿವೆ. ಉತ್ತರ ಕರ್ನಾಟಕದ ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.