Bangalore : ಹಿರಿಯ ನಟ ಶರತ್ ಬಾಬು (Sarath Babu) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಆದರೆ, ಇದು ಸುಳ್ಳು ಸುದ್ದಿ ಎಂದು ಅವರ ಕುಟುಂಬಸ್ಥರು ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿನ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿರುವ ನಟ ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯದಲ್ಲಿಯೇ ಅವರು ಸಂಪೂರ್ಣ ಆರೋಗ್ಯದಿಂದ ಮನೆಗೆ ಬರಲಿದ್ದಾರೆ ಎಂದು ಶರತ್ ಬಾಬು ಅವರ ಸಹೋದರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಶರತ್ ಬಾಬು ಅವರು ದಿಢೀರ್ ಅಸ್ವಸ್ಥರಾಗಿದ್ದರ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಹೈದರಾಬಾದ್‍ನ ಆಸ್ಪತ್ರೆ (Hyderabad Hospital) ಗೆ ಶಿಫ್ಟ್ ಮಾಡಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಟನಿಗೆ ಉಸಿರಾಡಲು ಕಷ್ಟವಾಗಿತ್ತು.
4 ದಶಕಗಳಿಂದಲೂ ಸಿನಿರಂಗದಲ್ಲಿ ಗುರುತಿಸಿಕೊಂಡಿದ್ದ ಅವರು, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಅವರು ನಟಿಸಿದ ಅಮೃತವರ್ಷಿಣಿ (mruthaVarshini) ಸಿನಿಮಾ ಜನಮಾನಸದಲ್ಲಿ ನೆಲೆ ನಿಂತಿತ್ತು.