ತಮಿಳುನಾಡಿನ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಮೂವರು ಮಹಿಳೆಯರು ಸೇರಿದಂತೆ 10 ಜನ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿರುವ ಘಟನೆ ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಬಳಿ ನಡೆದಿದೆ.
ಮಕಕ್ಕನಂ ಹತ್ತಿರದ ಎಕ್ಕಿರಕುಪ್ಪಂ ನಿವಾಸಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 24ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ಮಹಾನಿರೀಕ್ಷಕ (ಉತ್ತರ) ಎನ್ ಕಣ್ಣನ್ ಅವರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಎಲ್ಲಾ 10 ಸಂತ್ರಸ್ತರು ಎಥೆನಾಲ್-ಮೆಥೆನಾಲ್ ಪದಾರ್ಥಗಳೊಂದಿಗೆ ಮದ್ಯ ಸೇವಿಸಿದ್ದಾರೆ ಎಂದು ಹೇಳಿದ್ದಾರೆ. ನಕಲಿ ಮದ್ಯ ಸೇವನೆಯಿಂದ ಮೃತಪಟ್ಟಿರುವ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿವೆ ಮತ್ತು ಇದುವರೆಗೆ ಎರಡು ಘಟನೆಗಳ ನಡುವಿನ ಸಂಬಂಧದ ಯಾವುದೇ ಪುರಾವೆಗಳು ಪೊಲೀಸರಿಗೆ ಸಿಕ್ಕಿಲ್ಲ ಎನ್ನಲಾಗಿದೆ.
ವಿಲ್ಲುಪುರಂ ಜಿಲ್ಲೆಯಲ್ಲಿ ವಾಂತಿಭೇದಿ, ಕಣ್ಣುಗಳಲ್ಲಿ ಉರಿ, ತಲೆ ಸುತ್ತುವಿಕೆಯಿಂದ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಅಮರನ್ ನನ್ನು ಬಂಧಿಸಲಾಗಿದ್ದು, ನಕಲಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕಣ್ಣುಗಳಲ್ಲಿ ಉರಿ ಮತ್ತು ತಲೆಸುತ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿರುವ 33 ಜನರ ಸ್ಥಿತಿ ಚಿಂತಾಜನಕವಾಗಿದೆ.