NewDelhi : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಬಹುಮತ ಸಾಧಿಸಿದೆ. ಆದರೆ, ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮಧ್ಯೆ ಫೈಟ್ ನಡೆದಿದೆ. ಇದು ಕಾಂಗ್ರೆಸ್ ನ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದ ವೀಕ್ಷಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಒಪ್ಪಿಸಿದ್ದರು. ನಂತರ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರನ್ನು ದೆಹಲಿಗೆ ಕರೆಸಿಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಇಬ್ಬರ ಜತೆಗೂ ಹಲವು ಸುತ್ತಿನ ಮಾತುಕತೆ ನಡೆಸಿದೆ. ಆದರೂ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪಟ್ಟು ಬಿಡದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬುಧವಾರ ಬೆಳಗ್ಗೆ 11ಕ್ಕೆ ಅಂತಿಮ ಸಭೆ ನಿಗದಿಪಡಿಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಳೆಯ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಖರ್ಗೆ ಭೇಟಿ ವೇಳೆ ಸಿಎಂ ಸ್ಥಾನಕ್ಕಾಗಿ ಆಗ್ರಹಿಸಿದ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ. ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದಂತೆ ಉತ್ತಮವಾಗಿ ಕೆಲಸ ಮಾಡುವೆ ಎಂದು ಹೇಳಿದ್ದಾರೆ. ಸಿಎಂ ಸ್ಥಾನ ನೀಡದಿದ್ದರೆ ಕೇವಲ ಶಾಸಕನಾಗಿ ಮುಂದುವರಿಯುತ್ತೇನೆ. ಸರ್ಕಾರದ ಭಾಗವಾಗುವುದಿಲ್ಲ ಎಂದೂ ಹೇಳಿದ್ದಾರೆ ಎನ್ನಲಾಗಿದೆ.