Bangalore : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಗೃಹ ಲಕ್ಷ್ಮೀ ಯೋಜನೆ (Gruha Lakshmi Scheme) ಜಾರಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಮೂಲಕ ರಾಜ್ಯದ ಪ್ರತಿ ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಸರ್ಕಾರದಿಂದ 2 ಸಾವಿರ ರೂಪಾಯಿ ಬೀಳುವುದು ಗ್ಯಾರಂಟಿಯಾಗಿದೆ.
ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಿಗೆ ತಾತ್ವಿಕ ಅನುಮೋದನೆ ಸಿಕ್ಕಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಬಿಎಂ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯ ವಿವರವಾದ ರೂಪುರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ಆದೇಶವನ್ನು ಮೇ 20ರಂದು ನಡೆದ ಸಚಿವ ಸಂಪುಟ ತೀರ್ಮಾನದಂತೆ ಹೊರಡಿಸಲಾಗಿದೆ. ಯೋಜನೆಗೆ ಷರತ್ತುಗಳು ಹಾಗೂ ನಿಯಮಗಳು ಇವೆಯೇ ಎಂಬುದು ಮುಂದಿನ ದಿನಗಳಲ್ಲಿ ತಿಳಿದುಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಯುವ ನಿಧಿ ಯೋಜನೆ ಜಾರಿಗೆ ರಾಜ್ಯ ಸರ್ಕಾರದಿಂದ ತಾತ್ವಿಕ ಆದೇಶ ಹೊರಬಿದ್ದಿದೆ. ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3ಸಾವಿರ ರೂ. ಹಾಗೂ ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆ ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.
ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ದೊರಕಿದೆ. ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂ., ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡುವ ಗ್ಯಾರಂಟಿ ಯೋಜನೆಗಳಾಗಿವೆ.