ತುಮಕೂರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳು ಸ್ಥಳೀಯರಿಗೆ ಮೊದಲ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕಂಪನಿಗಳ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತುಮಕೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ಥಳೀಯರಿಗೆ ಕೆಲಸ ಕೊಡುತ್ತಿಲ್ಲ ಎನ್ನುವ ದೂರುಗಳು ಜಿಲ್ಲೆಯಲ್ಲಿ ಕೇಳಿ ಬಂದಿವೆ. ಈ ಕುರಿತು ಗಂಭೀರವಾಗಿ ಚಿಂತನೆ ನಡೆಸಿ, ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ತಮಗೆ ಕೆಲಸ ಸಿಗುತ್ತಿಲ್ಲ ಎಂದು ಯುವಕರು ಆತಂಕಪಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಉದ್ಯೋಗಗಳ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಖಾಸಗಿ ಕಂಪನಿಗಳಿಗೆ ನೀಡಿರುವ ಎಚ್ಚರಿಕೆ ಬರೀ ಮಾತಾಗಿ ಉಳಿಯಬಾರದು. ಬೆಂಗಳೂರಿಗೆ ಪರ್ಯಾಯವಾಗಿ ತುಮಕೂರು ಅಭಿವೃದ್ಧಿಯಾಗುತ್ತಿದೆ. ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಹಲವು ಕಂಪನಿಗಳು ಈಗಾಗಲೇ ಕಾರ್ಯಾಚರಣೆ ಮಾಡುತ್ತಿವೆ. ಇಲ್ಲಿ ಕನ್ನಡಿಗರಿಗಿಂತ ಹೊರ ರಾಜ್ಯದವರಿಗೆ ಹೆಚ್ಚಾಗಿ ಕೆಲಸ ನೀಡಲಾಗುತ್ತಿದೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಈ ಕುರಿತು ಸಚಿವರು ಗಮನ ಹರಿಸಿ ಎಲ್ಲಾ ಕಂಪನಿಗಳಿಗೆ ಎಚ್ಚರಿಕೆ ನೀಡುವ ಕೆಲಸ ಆಗಬೇಕಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.