ಬೆಂಗಳೂರು : ರಾಜ್ಯದಲ್ಲಿ (Karnataka)ಜೂನ್ ಮೊದಲ ವಾರದಲ್ಲಿ ಮುಂಗಾರು(Monsoon) ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಮಳೆ ಪ್ರವೇಶ ಮಾಡುವುದಕ್ಕೂ ಮುನ್ನ ಮೇ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆರಾಯನ ಅಬ್ಬರ (Rain) ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮೇ 31 ರಿಂದ ಜೂನ್ 2ರ ವರೆಗೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯಕ್ಕೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.