ಬೆಂಗಳೂರು: ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಮಾರ್ಗಸೂಚಿ ಪ್ರಕಟಿಸಿದ್ದು, ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ (BPL, APL, Antyodaya) ಹೊಂದಿದ ಮನೆಯ ಯಜಮಾನಿಗೆ ಈ ಯೋಜನೆ ಅನ್ವಯವಾಗಲಿದೆ.
ಕಾರ್ಡ್ ನಲ್ಲಿ ಹೆಸರಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ಜೂನ್ 15 ರಿಂದ ಜುಲೈ 15ರ ವರೆಗೆ ಸೇವಾಸಿಂಧು (Seva Sindhu) ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ಕಡ್ಡಾಯ ಮಾಡಲಾಗಿದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.
ಯಜಮಾನಿ ಅಥವಾ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಯಜಮಾನಿ ಅಥವಾ ಪತಿ ಜಿಎಸ್ಟಿ ರಿಟರ್ನ್ ಸಲ್ಲಿಸುವವರರಾಗಿದ್ದಲ್ಲಿ ಈ ಯೋಜನೆಯ ಲಾಭ ಸಿಗುವುದಿಲ್ಲ. ಒಂದು ವೇಳೆ ತಪ್ಪು ಮಾಹಿತಿ ನೀಡಿದರೆ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾರ್ಗಸೂಚಿಯಲ್ಲ ಎಚ್ಚರಿಕೆ ನೀಡಲಾಗಿದೆ.