ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪದ್ಮಶ್ರೀ ಪುರಸ್ಕೃತರಾಗಿರುವ ಅಂಕೋಲಾ ತಾಲೂಕಿನ ಉಳುವರೆ ಮೂಲದ ಹೊನ್ನಳ್ಳಿಯ ತುಳಸಿ ಗೌಡ ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡುವುದಾಗಿ ಹೇಳಿದೆ.
ಈ ಕುರಿತು ವಿಶ್ವ ವಿದ್ಯಾಲಯ ಹೇಳಿದೆ. ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಪರಿಗಣಿಸಿ ಕೃಷಿ ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವದ ಸಂದರ್ಭದಲ್ಲಿ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಆಗಮಿಸಲಿದ್ದಾರೆ.
ಜೂನ್ 16 ರಂದು ಬೆಳಿಗ್ಗೆ 11ಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸರ್ಕಾರದ ಕೃಷಿ ಸಂಶೋಧನಾ ಹಾಗೂ ಶಿಕ್ಷಣ ವಿಭಾಗದ ಮಹಾನಿರ್ದೇಶಕ ಡಾ.ಹಾಮಾಂಶು ಪಾಠಕ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕುಲಪತಿ ಡಾ.ಪಿ.ಎಲ್. ಪಾಟೀಲ್ ಸೇರಿದಂತೆ ಹಲವರು ಅಂದು ಆಗಮಿಸಲಿದ್ದಾರೆ.