Tiruvanantapura : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕೇರಳ (Kerala) ಪ್ರವಾಸದ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ದಾಳಿ (Suicide Bomb Attack Threat) ನಡೆಯುವ ಸಾಧ್ಯತೆ ಇದೆ ಎಂಬ ಬೆದರಿಕೆ ಪತ್ರವೊಂದು ಸಿಕ್ಕಿದ್ದು, ಕೇರಳದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಮೋದಿ ಅವರು ಏಪ್ರಿಲ್ 24ರಂದು ಕೇರಳದ ಕೊಚ್ಚಿಗೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಬಾಂಬ್ ದಾಳಿ ನಡೆಯಲಿದೆ ಎಂದು ಬೆದರಿಕೆ ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವಿಚಾರವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರದಲ್ಲಿ ವ್ಯಕ್ತಿಯೊಬ್ಬರ ಹೆಸರು ಮತ್ತು ವಿವರಗಳಿದ್ದವು. ಹೀಗಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆದರೆ, ತನ್ನ ಹೆಸರಿನಲ್ಲಿ ಬೇರೆ ಯಾರೋ ಕೃತ್ಯ ಎಸಗಿದ್ದಾರೆ ಎಂದು ಆ ವ್ಯಕ್ತಿ ತಿಳಿಸಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳೆಲ್ಲ ನಿಗದಿಯಂತೆಯೇ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ತಿಳಿಸಿದ್ದಾರೆ. ಏ. 24ರಂದು ಕೇರಳದ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ, ‘ಯುವಂ’ ಸಮಾವೇಶ ಉದ್ಘಾಟಿಸಿ ಮಾತನಾಡಲಿದ್ದಾರೆ. ನಂತರ ಕೊಚ್ಚಿಯಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಮರುದಿನ ತಿರುವನಂತಪುರಕ್ಕೆ ಭೇಟಿ ನೀಡಲಿರುವ ಅವರು, ರಾಜ್ಯಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಘೋಷಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.